ವಿಜಯನಗರ ಜಿಲ್ಲೆಯ ಸಮಸ್ಯೆಗಳಿಗೆ ಶೀಘ್ರ ಪರಿಹಾರದ ಭರವಸೆ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್.
ಹೊಸಪೇಟೆ ಆಗಷ್ಟ.16

ನೂತನ ವಿಜಯನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ ಎಂದು ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಸ್ವಾತಂತ್ರೋತ್ಸವ ನಿಮಿತ್ತ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ 405 ಅಡಿ ಎತ್ತರದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯ ಅಭಿವೃದ್ಧಿಗೆ ನನ್ನನ್ನು ಉಸ್ತುವಾರಿ ಸಚಿವರನ್ನಾಗಿ ನೇಮಿಸಿದ್ದಾರೆ. ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಪರಿಹರಿಸಬೇಕಿದೆ. ಅದಕ್ಕಾಗಿ ತಾಲೂಕುವಾರು ಪ್ರಗತಿ ಪರಿಶೀಲನಾ ಸಭೆ ನಡೆಸಿ, ಸರ್ಕಾರದ ಮಟ್ಟದಲ್ಲಿ ಪರಿಹರಿಸಬೇಕಾದ ಸಮಸ್ಯೆಗಳ ಕುರಿತು ಮಾಹಿತಿ ಕಲೆ ಹಾಕಲಾಗಿದೆ. ಆದಷ್ಟು ಬೇಗ ಎಲ್ಲ ಸಮಸ್ಯೆಗಳ ನಿವಾರಣೆಗೆ ಕ್ರಮ ವಹಿಸಲಾಗುವುದು ಎಂದರು.ಹೋರಾಟಗಾರರ ತ್ಯಾಗ, ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದೊರಕಿದೆ. ಅವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ, ಈ ಭಾಗದ ಕಮಲಾಪುರದ 90ರ ಹರೆಯದ ಗುಂಡೂರಾವ್ ದೇಸಾಯಿ ಅವರು ಇಂದಿಗೂ ನಮ್ಮೊಂದಿಗೆ ಇರುವುದು ನಮ್ಮ ಸೌಭಾಗ್ಯ ಎಂದು ಅಭಿಪ್ರಾಯಪಟ್ಟರು.

ಚುನಾವಣೆ ಪೂರ್ವದಲ್ಲಿ ಮತದಾರರಿಗೆ ನೀಡಿರುವ ಐದು ಭರವಸೆಗಳಲ್ಲಿ ಈಗಾಗಲೇ ನಾಲ್ಕನ್ನು ಈಡೇರಿಸಲಾಗಿದೆ. ಯುವನಿಧಿ ಸಹ ಮುಂದಿನ ದಿನಗಳಲ್ಲಿ ಜಾರಿಯಾಗಲಿದೆ ಎಂದು ತಿಳಿಸಿದರು. ಆಕರ್ಷಕ ಪಥಸಂಚಲನ: ಪೊಲೀಸ್, ಮಹಿಳಾ ಪೊಲೀಸ್, ಗೃಹರಕ್ಷಕ ದಳ, ವಿಜಯನಗರ ಕಾಲೇಜಿನ ಎನ್‌ಸಿಸಿ, ಸೈಟ್ಸ್ ಮತ್ತು ಗೈಡ್ಸ್, ಭಾರತ ಸೇವಾದಳ, ಆಶಾ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ಶಿಸ್ತಿನಿಂದ ಪಥಸಂಚಲನ ನಡೆಸಿದರು. ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ವಿವಿಧ ಇಲಾಖೆಗಳ ಸಾಧಕರನ್ನು ಸನ್ಮಾನಿಸಲಾಯಿತು. ಪಿಯುಸಿ (ಕಲಾ ವಿಭಾಗ) ಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನಗಳಿಸಿದ ಕೊಟ್ಟೂರಿನ ಇಂದು ಪಿಯು ಕಾಲೇಜಿನ ವಿದ್ಯಾರ್ಥಿ ತಾಳೇಬಸಾಪುರ ತಾಂಡಾದ ಕುಶಾನಾಯ್ಕಗೆ ಸಚಿವ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ ಒಂದು ಲಕ್ಷ ರೂ. ನಗದು ವಿತರಿಸಿದರು. ನಂತರ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ಈ ಸಂದರ್ಭದಲ್ಲಿವೈ.ದೇವೇಂದ್ರಪ್ಪ, ಶಾಸಕ ಎಚ್.ಆರ್.ಗವಿಯಪ್ಪ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ,ಸಿಇಒ ಸದಾಶಿವ ಪ್ರಭು ಬಿ., ಎಸ್ಪಿ ಶ್ರೀಹರಿ ಬಾಬು ಬಿ.ಎಲ್., ಪ್ರಾದೇಶಿಕ ವಲಯ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಉಪವಿಭಾಗಾಧಿಕಾರಿ ನೋಂಗ್ಲಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ , ಸಂಘ ಸಂಸ್ಥೆಯ ಮುಖಂಡರು ಸದಸ್ಯರು ಕಾರ್ಯದರ್ಶಿಗಳು ನಿವೃತ್ತ ಅಧಿಕಾರಿಗಳು ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು.
ತಾಲೂಕ ವರದಿಗಾರರು:ಮಾಲತೇಶ್.ಶೆಟ್ಟರ್. ಹೊಸಪೇಟ

