ಅಧಿಕಾರಿಗಳಿಗೆ ಸಾಮಾಜಿಕ ಕಳಕಳಿ ಇರಬೇಕೆಂಬುದು ಸದನ ಸಮಿತಿಯ ಮನವಿಯಾಗಿದೆ – ಪಿ.ಎಂ. ನರೇಂದ್ರಸ್ವಾಮಿ.
ಹೊಸಪೇಟೆ ಸ.28

ವಿವಿಧ ಇಲಾಖೆಗಳ ಅನುಷ್ಠಾನ ಅಧಿಕಾರಿಗಳು ಸಾಮಾಜಿಕ ಕಳಕಳಿ ಇಟ್ಟುಕೊಂಡು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯೋಜನೆಗಳ ಮತ್ತು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಮುಂದಾಗಬೇಕು ಎನ್ನುವ ಬದ್ಧತೆಯನ್ನು ಹೊಂದಿ ಕಾರ್ಯನಿರ್ವಹಿಸ ಬೇಕು ಎಂಬುದು ಸದನ ಸಮಿತಿಯ ಮನವಿಯಾಗಿದೆ ಎಂದು ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ ಅವರು ಹೇಳಿದರು.ವಿಧಾನಸ ಭಾ ಸದಸ್ಯರು ಹಾಗೂ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಸದಸ್ಯರಾದ ಕೃಷ್ಣ ನಾಯಕ, ಜಗದೇವ್ ಗುತ್ತೇದಾರ್, ಐಹೊಳೆ ದುರ್ಯೋಧನ, ಬಸವರಾಜ್ ಮತ್ತಿಮೂಡ್, ಶಾಂತರಾಮ್ ಬುಡ್ನ ಸಿದ್ದಿ ಅವರ ಸಮ್ಮುಖದಲ್ಲಿ ಬಳ್ಳಾರಿ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಸೆ. 27 ರಂದು ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಶಿಕ್ಷಣ ದಿಂದಲೇ ಎಲ್ಲವೂ ಎಂಬುದನ್ನು ಪ್ರತಿಯೊಬ್ಬರು ಅರಿಯಬೇಕು. ಉತ್ತಮ ಶಿಕ್ಷಣ ಸಿಗದ ಮಕ್ಕಳಿಂದಲೇ ನಾಳೆ ಸಮಾಜ ಘಾತುಕ ಕೆಲಸ ನಡೆಯುತ್ತವೆ ಎಂಬ ಎಚ್ಚರಿಕೆ ಹೊಂದಿ ಅವಕಾಶ ವಂಚಿತ ಮಕ್ಕಳಿಗೆ ಉತ್ತಮ ರೀತಿಯಲ್ಲಿ ಶಿಕ್ಷಣ ಸಿಗುವ ಹಾಗೆ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಈ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಸತಿ ನಿಲಯದಲ್ಲಿನ ವಿದ್ಯಾರ್ಥಿಗಳ ಶಿಕ್ಷಣ ಚಟುವಟಿಕೆಗಳ ಬಗ್ಗೆ ಗಮನ ಹರಿಸಬೇಕು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿ ಗುಣಮಟ್ಟದ ಶಿಕ್ಷಣ ಸಿಗಬೇಕು. ಇತರ ವಿದ್ಯಾರ್ಥಿಗಳ ಹಾಗೆ ಬೆಳೆಯ ಬೇಕು. ಈ ದೇಶದ ಸಂಪತ್ತಾಗ ಬೇಕು. ಇಂತಹ ಜನಪರ ಆಲೋಚನೆಗಳನ್ನು ಹೊಂದಿ ಮುಖ್ಯವಾಗಿ ಅಂಗನವಾಡಿ ಶಿಕ್ಷಣ ಹಾಗೂ ಪ್ರಾಥಮಿಕ ಶಿಕ್ಷಣದಲ್ಲಿ ಎಸ್ಸಿ/ಎಸ್ಸಿ ಮಕ್ಕಳಿಗೆ ಉತ್ತಮವಾದ ಶಿಕ್ಷಣ ಕೊಡುವ ವ್ಯವಸ್ಥೆಯನ್ನು ಮಾಡಲು ಕ್ರಮವಹಿಸ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಅಧ್ಯಕ್ಷರು ನಿರ್ದೇಶನ ನೀಡಿದರು.ಬಹುತೇಕ ಜನರಿಗೆ ಅವಕಾಶ ಸಿಗದ ಈ ಜಗತ್ತಿನಲ್ಲಿ ಸಮಾಜ ಸೇವೆ ಮಾಡುವ ಅವಕಾಶ ಅಧಿಕಾರಿಗಳಿಗೆ ಸಂವಿಧಾನ ಬದ್ಧವಾಗಿ ಸಿಕ್ಕಿರುತ್ತದೆ. ಇದನ್ನು ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಅರಿತು ಸಮಾಜ ಮುಖಿ ಆಲೋಚನೆಯನ್ನು ಇಟ್ಟುಕೊಂಡು ಅವಕಾಶ ವಂಚಿತ ಜನರ ಯೋಜನೆಗಳ ಅನುಷ್ಠಾನಕ್ಕೆ ಶ್ರಮಿಸಬೇಕು. ಕಾಲ ಕಾಲಕ್ಕೆ ಶಾಲಾ-ಕಾಲೇಜುಗಳು ಮತ್ತು ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ ಮತ್ತು ಸಮಾಜ ಕಲ್ಯಾಣ ಇಲಾಖೆ, ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಅಧ್ಯಕ್ಷರು ಸೂಚನೆ ನೀಡಿದರು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರ ಅರ್ಜಿಗಳ ಬಗ್ಗೆ ಗಮನ ಹರಿಸಿ ಸ್ಮಶಾನ ಭೂಮಿ ಮಂಜೂರಾತಿಗೆ ಒತ್ತು ಕೊಡಬೇಕು ಎಂದು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಅಧ್ಯಕ್ಷರು ಸೂಚನೆ ನೀಡಿದರು. ಹಗರಿಬೊಮ್ಮನಹಳ್ಳಿ ತಾಲೂಕಿನ ಕೆಂಚಟನ ಹಳ್ಳಿಯಲ್ಲಿ ಈಗಾಗಲೇ ಸ್ಮಶಾನಭೂಮಿ ಕಾಯ್ದಿರಿಸಲಾಗಿದೆ. ಹಗರಿಬೊಮ್ಮನಹಳ್ಳಿ ತಾಲೂಕಿನ ಮೋರಿಗೇರಿ, ಹರಪನಹಳ್ಳಿ ತಾಲೂಕಿನ ತಿಮ್ಮಲಾಪುರ, ಹಡಗಲಿ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಸ್ಮಾಶಾನಕ್ಕಾಗಿ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ ಸ್ಮಶಾನ ಸೌಲಭ್ಯಕ್ಕೆ ಕ್ರಮ ವಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.ವಿಜಯನಗರ ಜಿಲ್ಲೆಯಲ್ಲಿ ಕಂದಾಯ ಗ್ರಾಮ ರಚನೆಯ ಪ್ರಗತಿಯ ಬಗ್ಗೆ ಅಧ್ಯಕ್ಷರು ಕೇಳಿದರು. ವಿಜಯನಗರ ಜಿಲ್ಲೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಹಟ್ಟಿ, ತಾಂಡಾ ಮತ್ತು ಇನ್ನೀತರ ಪ್ರದೇಶಗಳನ್ನು ಹೊಸ ಕಂದಾಯ ಗ್ರಾಮವನ್ನಾಗಿ ಘೋಷಿಸುವ ಪ್ರಕ್ರಿಯೆ ನಡೆಯುತ್ತಿದೆ. 110 ತಾಂಡಾಗಳನ್ನು ಕಂದಾಯ ಗ್ರಾಮವನ್ನಾಗಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಪ್ರಸಕ್ತ ವರ್ಷದಲ್ಲಿ ಬಾಕಿ ಇರುವ ಎಲ್ಲ ಪ್ರಕ್ರಿಯೆಯನ್ನು ಪೂರ್ಣ ಗೊಳಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಯ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಮಾಹಿತಿ ನೀಡಿದರು.ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಬೇಕು ಎಂದು ಅಧ್ಯಕ್ಷರು ತಿಳಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಜನರ ಮೇಲೆ ದೌರ್ಜನ್ಯ ಪ್ರಕರಣಗಳು ದಾಖಲಾದ ಕೂಡಲೇ ಪೊಲೀಸ್ ಇಲಾಖೆ ಯಿಂದ ನಿಯಮಾನುಸಾರ ಕ್ರಮ ವಹಿಸಲಾಗುತ್ತದೆ. ತಪ್ಪಿತಸ್ಥರನ್ನು ನಿಯಮಾನುಸಾರ ಶಿಕ್ಷೆಗೆ ಗುರಿ ಪಡಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್. ಅವರು ತಿಳಿಸಿದರು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರ ಜಮೀನುಗಳಿಗೆ ರಸ್ತೆ ಸಂಪರ್ಕಕ್ಕಾಗಿ ದೂರು ಬಂದಿರುವ ಅರ್ಜಿಗಳ ಬಗ್ಗೆ ಗಮನ ಹರಿಸಬೇಕು. ಜೆಸ್ಕಾಂ ಅಧಿಕಾರಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಜನ ವಸತಿ ಪ್ರದೇಶಕ್ಕೆ ತೆರಳಿ ಅಲ್ಲಿನ ಕುಂದು ಕೊರತೆಗಳ ಬಗ್ಗೆ ಪರಿಶೀಲಿಸ ಬೇಕು ಎಂದು ಹೂವಿನಹಡಗಲಿ ಶಾಸಕರು ಮತ್ತು ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಸದಸ್ಯರಾದ ಕೃಷ್ಣ ನಾಯಕ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಮೀನುಗಳಿಗೆ ರಸ್ತೆ ಸಂಪರ್ಕಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯಲ್ಲಿ ಒಟ್ಟು 34 ದೂರು ಅರ್ಜಿಗಳು ಬಂದಿದ್ದು, ಗ್ರಾಮ ನಕಾಶೆ ಯನ್ವಯ ನಕ್ಷೆ ಇರುವುದನ್ನು ಪರಿಶೀಲಿಸಿ ಅರ್ಜಿಗಳ ವಿಲೇವಾರಿ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಪ್ರತಿಕ್ರಿಯಿಸಿದರು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಹೆಚ್ಚಾಗಿ ವಾಸಿಸುವ ಕಾಲೋನಿಗಳಲ್ಲಿ ಹಳೆಯದಾದ ಪೈಪುಗಳಿಗೆ ಸಂಪರ್ಕ ಕಲ್ಪಿಸಿ ಜಲಜೀವನ ಮಿಷನ್ ಕಾಮಗಾರಿ ಮಾಡಲಾಗುತ್ತಿದೆ ಎನ್ನುವ ದೂರುಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಶೀಲಿಸ ಬೇಕು ಎಂದು ಅಧ್ಯಕ್ಷರು ಸೂಚನೆ ನೀಡಿದರು.ನಿಗದಿ ಪಡಿಸಿದ ಮೊತ್ತದ ಮಿತಿಯೊಳಗಿನ ಕಾಮಗಾರಿಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ಗುತ್ತಿಗೆದಾರರಿಗೆ ನೀಡಬೇಕು ಎನ್ನುವ ಮೀಸಲು ನಿಯಮವನ್ನು ಉದ್ದೇಶ ಪೂರ್ವಕವಾಗಿ ಉಲ್ಲಂಘಿಸುವುದು ಕಂಡು ಬಂದಲ್ಲಿ ಅಂತವರನ್ನು ಕಠಿಣವಾದ ಕಾನೂನು ಕ್ರಮಕ್ಕೆ ಗುರಿ ಪಡಿಸಬೇಕಾಗುತ್ತದೆ. ಹೀಗಾಗಿ ಮೀಸಲು ಪಾಲನೆಗೆ ಒತ್ತು ಕೊಡಬೇಕು ಎಂದು ಪಂಚಾಯತ್ ರಾಜ್ಯ ಎಂಜಿನಿಯರಿಂಗ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಭಿಯಂತರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಸಭೆಯಲ್ಲಿ ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ನಾನಾ ಇಲಾಖೆಗಳ ಬಗ್ಗೆ ಅಧ್ಯಕ್ಷರು ಮತ್ತು ಸದಸ್ಯರು ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಕರ್ನಾಟಕ ವಿಧಾನ ಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ಪಿ.ಸೀನ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ ಶಾ, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲಾನ್, ಸಹಾಯಕ ಆಯುಕ್ತರಾದ ವಿವೇಕಾನಂದ ಪಿ.ಚಿದಾನಂದ ಗುರುಸ್ವಾಮಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ, ನಗರ ಸಭೆ ಪೌರಾಯುಕ್ತರಾದ ಚಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಹೆಚ್.ಎಸ್.ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಟಿ.ಎಚ್.ಎಂ ರಾಜಕುಮಾರ್.ಕಂಪ್ಲಿ.ಬಳ್ಳಾರಿ