ಮಳೆಗಾಗಿ ಜು.17 ರಂದು ಜೆಡಿಎಸ್‌ನಿಂದ ವಿಶೇಷ ಪೂಜೆ ಪಾದಯಾತ್ರೆ – ಮಾಜಿ ಶಾಸಕ ರಾಜಾ.ವೆಂಕಟಪ್ಪ ನಾಯಕ ಅವರಿಂದ.
ಮಾನ್ವಿ ಜು.14

ರೈತರು ಮಳೆಯ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿದ್ದು, ಉತ್ತಮ ಮಳೆಯಾಗಿ ಬೆಳೆಗಳು ಸಮೃದ್ಧವಾಗಿ ಬೆಳೆಯಲಿ ಹಾಗೂ ರೈತರ ಬದುಕಿನಲ್ಲಿ ನೆಮ್ಮದಿ ನೆಲೆಸಲಿ ಎಂಬ ಉದ್ದೇಶದಿಂದ ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದ ವತಿಯಿಂದ ಜು.17 ರಂದು ವಿಶೇಷ ಪಾದಯಾತ್ರೆ ಹಾಗೂ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ಪಟ್ಟಣದ ಜೆಡಿಎಸ್ ಪಕ್ಷದ ಕಾರ್ಯಾಲಯದಲ್ಲಿ ಬುಧವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯ ಕೊರತೆಯಿಂದ ರೈತರು ಆತಂಕದಲ್ಲಿದ್ದು, ಬಿತ್ತನೆ ಮಾಡಿದ ಬೆಳೆಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ಸಂಕಷ್ಟ ನಿವಾರಣೆಯಾಗಲಿ, ರಾಜ್ಯದಲ್ಲಿ ಉತ್ತಮ ಮಳೆಯಾಗಿ ಸಮೃದ್ಧ ಬೆಳೆ ಬೆಳೆಯಲಿ ಹಾಗೂ ಜನ ಜೀವನ ಸುಧಾರಿಸಲಿ ಎಂಬ ಸಂಕಲ್ಪದೊಂದಿಗೆ ದೇವರ ಮೊರೆ ಹೋಗಿ ವಿಶೇಷ ಪೂಜೆ ಹಾಗೂ ಪಾದಯಾತ್ರೆಯನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು, ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಬೇಕು ಎಂದು ಮನವಿ ಮಾಡಿದರು.

ಜು.17 ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಮಾನ್ವಿ ಪಟ್ಟಣದ ಕೊನಾಪೂರ್ ಪೇಟೆಯ ಶ್ರೀ ಮಾರಿಕಾಂಬಾ ದೇವಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಗುತ್ತದೆ. ಬಳಿಕ ಟಿಪ್ಪು ಸುಲ್ತಾನ್ ವೃತ್ತದ ಮೂಲಕ ಶ್ರೀ ಚೌಡೇಶ್ವರಿ ದೇವಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ, ಕಚೇರಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಬಸವ ವೃತ್ತ, ಡಾ, ಬಿ.ಆರ್ ಅಂಬೇಡ್ಕರ್ ವೃತ್ತ ಮಾರ್ಗವಾಗಿ ಶ್ರೀ ಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದ ನೀರಮಾನ್ವಿ ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನಕ್ಕೆ ತಲುಪಿ ವಿಶೇಷ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಸಮಾರೋಪ ಗೊಳ್ಳಲಿದೆ ಎಂದು ತಿಳಿಸಿದರು.
ಈ ಪಾದಯಾತ್ರೆಯು ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟು ಕೊಂಡು ಉತ್ತಮ ಮಳೆಯಾಗುವಂತೆ ದೇವರಲ್ಲಿ ಪ್ರಾರ್ಥಿಸುವ ಉದ್ದೇಶ ದಿಂದ ಹಮ್ಮಿಕೊಳ್ಳಲಾಗಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ಮಾನ್ವಿ ತಾಲೂಕು ಅಧ್ಯಕ್ಷ ಈರಣ್ಣ ಮರ್ಲಟ್ಟಿ, ಸಿರವಾರ ತಾಲೂಕು ಅಧ್ಯಕ್ಷ ಟಿ. ಮಲ್ಲಿಕಾರ್ಜುನ ಪಾಟೀಲ್, ನಗರ ಘಟಕದ ಅಧ್ಯಕ್ಷ ಹೆಚ್. ಮೌನೇಶ್ ಗೌಡ, ರೈತ ಘಟಕದ ಅಧ್ಯಕ್ಷ ಶರಣಪ್ಪ ಗೌಡ ಮದ್ಲಾಪೂರ್, ಮುಖಂಡ ಬಾಷ ಸಾಬ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

