ರೈತರ ಜಮೀನುಗಳಿಗೆ ನೀರು ಹರಿಸಿ, ಚಿಕ್ಕಲಕಿ ಕ್ರಾಸ್‌ನಲ್ಲಿ – ಅನ್ನದಾತರ ಬೃಹತ್ ಹೋರಾಟ.

ಜಮಖಂಡಿ ಜು.24

ಏಕಲಮಟ್ಟಿ ಏತ ನೀರಾವರಿ ಯೋಜನೆಯಿಂದ ರೈತರ ಜಮೀನುಗಳಿಗೆ ಕೂಡಲೇ ನೀರು ಹರಿಸಬೇಕು ಎಂದು ಆಗ್ರಹಿಸಿ ತಾಲೂಕಿನ ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರು ಬೃಹತ್ ಅರೆಬತ್ತಲೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಚಿಕ್ಕಲಕಿ ಕ್ರಾಸ್‌ನ ರಾಜ್ಯ ಹೆದ್ದಾರಿ ಬಂದ್ ಮಾಡಿ ಸರ್ಕಾರ ಹಾಗೂ ನೀರಾವರಿ ಇಲಾಖೆ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಹೋರಾಟಕ್ಕೆ ಚಿಕ್ಕಲಕಿ ಕ್ರಾಸ್‌ನ ಅಂಗಡಿಕಾರರು ಹಾಗೂ ರಸ್ತೆ ಬದಿಯ ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಬೆಂಬಲ ಸೂಚಿಸಿದರು. ವಿವಿಧ ರೈತಪರ ಸಂಘಟನೆಗಳು, ಕೂಲಿ ಕಾರ್ಮಿಕರು, ಸಾಮಾಜಿಕ ಹೋರಾಟಗಾರರು ಹಾಗೂ ರಾಜಕೀಯ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ರಾಮಪ್ಪ ಕರ್ಜಗಿ, ಏಕಲಮಟ್ಟಿ ಏತ ನೀರಾವರಿ ಯೋಜನೆ ಆರಂಭವಾಗಿ ಸುಮಾರು 15 ವರ್ಷಗಳು ಕಳೆದರೂ ರೈತರ ಜಮೀನುಗಳಿಗೆ ನೀರು ಹರಿದಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಯೋಜನೆ ಪೂರ್ಣ ಗೊಳ್ಳದೆ ರೈತರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು.

ರೈತ ಮುಖಂಡ ಸುನಿಲ್ ಕದಂ ಮಾತನಾಡಿ, ರೈತರು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು. ಏಕಲಮಟ್ಟಿ ಏತ ನೀರಾವರಿ ಯೋಜನೆಯಿಂದ ರೈತರ ಜಮೀನುಗಳಿಗೆ ನೀರು ಹರಿಯುವವರೆಗೂ ಹೋರಾಟ ಮುಂದುವರಿಸಲಾಗುವುದು.

ರೈತರಿಗೆ ನ್ಯಾಯ ದೊರೆಯುವವರೆಗೆ ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.

ರೈತ ಮುಖಂಡ ಅಪ್ಪಾಜಿ ಸೂರ್ಯವಂಶಿ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ನೀರಾವರಿ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ಹಲವು ವರ್ಷಗಳಿಂದ ರೈತರು ನೀರಿಗಾಗಿ ಹೋರಾಟ ನಡೆಸುತ್ತಿದ್ದರೂ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಮುಂದೆ ಕಾಲಹರಣ ಮಾಡದೆ ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣ ಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರು ಸರ್ಕಾರ ಹಾಗೂ ನೀರಾವರಿ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿ, ಏಕಲಮಟ್ಟಿ ಏತ ನೀರಾವರಿ ಯೋಜನೆಯಿಂದ ಕೂಡಲೇ ನೀರು ಹರಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯಿಂದ ಚಿಕ್ಕಲಕಿ ಕ್ರಾಸ್‌ನ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಈ ಸಂದರ್ಭದಲ್ಲಿ ಸಿದರಾಯ ಸನಶಿದ್ದ, ಪರಮಾನಂದ ಬೇಳಿಕಟ್ಟಿ, ರೇವಣಸಿದ್ಧ ಮಾದರ, ಶ್ರೀಕಾಂತ್ ಬಡಿಗೇರ ಸೇರಿದಂತೆ ವಿವಿಧ ರೈತಪರ ಸಂಘಟನೆಗಳ ಮುಖಂಡರು, ರೈತರು, ಕೂಲಿ ಕಾರ್ಮಿಕರು, ಸಾಮಾಜಿಕ ಹೋರಾಟಗಾರರು ಹಾಗೂ ರಾಜಕೀಯ ಮುಖಂಡರು ಉಪಸ್ಥಿತರಿದ್ದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button