ಸ್ವಾತಂತ್ರ್ಯ ದಿನಾಚರಣೆ, ಸಂವಿಧಾನದ ಸಮಾನತೆಯ ಹಕ್ಕುಗಳನ್ನು ಸದುಪಯೋಗ ಪಡಿಸಿಕೊಳ್ಳಲು – ಶಾಸಕ ಜಿ.ಹೆಚ್ ಶ್ರೀನಿವಾಸ್ ಕರೆ.
ತರೀಕೆರೆ ಆ.15



ಸ್ವಾತಂತ್ರ್ಯಕ್ಕಾಗಿ ಸಾವಿರಾರು ಜನ ತಮ್ಮ ಮಾನ, ಪ್ರಾಣಗಳನ್ನು ಬಲಿದಾನ ಮಾಡಿದ್ದಾರೆ. ಸ್ವತಂತ್ರ ಭಾರತದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಲು ಡಾ, ಬಿ.ಆರ್ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನವು ಎಲ್ಲಾ ಜಾತಿ, ಧರ್ಮ ಹಾಗೂ ಮಹಿಳೆಯರಿಗೆ ಸಮಾನತೆಯ ಹಕ್ಕುಗಳನ್ನು ನೀಡಿದೆ ಎಂದು ತರೀಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕ ಜಿ.ಹೆಚ್ ಶ್ರೀನಿವಾಸ್ ಹೇಳಿದರು.
ತರೀಕೆರೆಯಲ್ಲಿ ನಡೆದ 80 ನೇ. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಅಜ್ಜಂಪುರ ಭಾಗದಲ್ಲಿ ಮಳೆ ಕೊರತೆ, ಬೆಳೆ ಹಾನಿ ಹಾಗೂ ತೀವ್ರ ಬರಗಾಲದ ಪರಿಸ್ಥಿತಿ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ 120 ಕೆರೆಗಳಿಗೆ ನೀರು ಒದಗಿಸುವ ಕೆಲಸ ಮಾಡಲಾಗಿದೆ ಎಂದರು.
ಯುವ ಜನರು ಮಾದಕ ವಸ್ತುಗಳಿಂದ ದೂರವಿರಬೇಕು. ಬಾಲಕರು ತಂಬಾಕು ಹಾಗೂ ಗುಟ್ಕಾ ಸೇವನೆಯಂತಹ ದುಶ್ಚಟಗಳಿಗೆ ಒಳಗಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು. ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಭಾರತ್ ಜೋಡೋ ಯುವಕರ ತಂಡಗಳನ್ನು ರಚಿಸಿ, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳ ಬೇಕೆಂದು ಕರೆ ನೀಡಿದರು.
ಉಪ ವಿಭಾಗಾಧಿಕಾರಿಗಳು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಬರಗಾಲದ ಪರಿಸ್ಥಿತಿಯಲ್ಲಿ ಪರಿಸರ ಸಂರಕ್ಷಣೆ ಅತ್ಯಂತ ಅಗತ್ಯವಾಗಿದೆ. ನೀರು, ಅರಣ್ಯ, ಮಣ್ಣು ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಮುಂದಿನ ಪೀಳಿಗೆಗಾಗಿ ಸಂರಕ್ಷಿಸಬೇಕು. ಪ್ರತಿಯೊಬ್ಬರೂ ಗಿಡಮರಗಳನ್ನು ಬೆಳೆಸುವ ಸಂಕಲ್ಪ ಮಾಡಬೇಕು. ಪ್ಲಾಸ್ಟಿಕ್ ಬಳಕೆಯನ್ನು ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರು, ಸೈನಿಕರು ಹಾಗೂ ಹುತಾತ್ಮರಾದ ಪೊಲೀಸ್ ಮತ್ತು ಭದ್ರತಾ ಸಿಬ್ಬಂದಿಗೆ ಗೌರವ ನಮನ ಸಲ್ಲಿಸುವುದಾಗಿ ಅವರು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಶಾಲಾ ಮಕ್ಕಳಿಂದ ಮನಮೋಹಕ ದೇಶಭಕ್ತಿ ನೃತ್ಯ:-
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ದೇಶ ಭಕ್ತಿ ಗೀತೆಗಳಿಗೆ ಮನಮೋಹಕ ನೃತ್ಯ ಪ್ರದರ್ಶನ ನೀಡಿದರು. ದೇಶಪ್ರೇಮ, ಏಕತೆ ಹಾಗೂ ರಾಷ್ಟ್ರಭಕ್ತಿಯ ಸಂದೇಶ ಸಾರಿದ ಮಕ್ಕಳ ನೃತ್ಯ ಪ್ರದರ್ಶನಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು. ಮಕ್ಕಳ ಅತ್ಯುತ್ತಮ ಪ್ರದರ್ಶನಕ್ಕೆ ನೆರೆದಿದ್ದ ಸಾರ್ವಜನಿಕರು ಹಾಗೂ ಗಣ್ಯರಿಂದ ಮೆಚ್ಚುಗೆ ವ್ಯಕ್ತವಾಯಿತು.
ಕಾರ್ಯಕ್ರಮದಲ್ಲಿ ನಾಡಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ ರಶ್ಮಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ದೇವೇಂದ್ರಪ್ಪ, ಡಿ.ವೈ.ಎಸ್.ಪಿ ಪರಶುರಾಮಪ್ಪ, ಬಿ.ಇ.ಓ ಪರಶುರಾಮಪ್ಪ, ಪುರಸಭೆ ಮುಖ್ಯಾಧಿಕಾರಿ ತಹೇರಾ ತಸ್ನಿಮ್, ಪಿ.ಐ ರಾಮಚಂದ್ರ ನಾಯ್ಕ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ಜಿಲ್ಲಾ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎನ್ ವೆಂಕಟೇಶ್ ತರೀಕೆರೆ ಚಿಕ್ಕಮಗಳೂರು
