ಆಯುಷ್ಮಾನ್ ಆರೋಗ್ಯ ಕೇಂದ್ರದಲ್ಲಿ ಜನರಿಗೆ – ಉತ್ತಮ ಆರೋಗ್ಯ ಸೇವೆ.
ದೇವಣಗಾಂವ ಆ.8


ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಆಯುಷ್ಮಾನ್ ಆರೋಗ್ಯ ಕೇಂದ್ರದಲ್ಲಿ ದಿನಾಂಕ 27-08-2026 ರಂದು ಗ್ರಾಮಸ್ಥರಿಗೆ ಆರೋಗ್ಯ ಸೇವೆ ಹಾಗೂ ಆರೋಗ್ಯದ ಕುರಿತು ಸೂಕ್ತ ಸಲಹೆ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಶ್ರೀ ವಿಠೋಬಾ ಶರಣಪ್ಪ ಕಲಬಾ ಅವರು ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಮ್ಮ ಆರೋಗ್ಯ ಸಮಸ್ಯೆಗಳ ಕುರಿತು ಆರೋಗ್ಯ ಸಿಬ್ಬಂದಿಯೊಂದಿಗೆ ಚರ್ಚಿಸಿದರು. ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಭಾಗ್ಯಶ್ರೀ ವಾಲಿಕರ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಸುಹಾಸಿನಿ ಕಲಶೆಟ್ಟಿ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀ ಸಂತೋಷ್ ಕುಮಾರ್ ಕೋರಿ ಅವರು ಆರೋಗ್ಯದ ಕುರಿತು ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.
ಪತ್ರಕರ್ತರೊಂದಿಗೆ ಆರೋಗ್ಯ ಅಧಿಕಾರಿಗಳ ಮಾಹಿತಿ:-
ಈ ಸಂದರ್ಭದಲ್ಲಿ ಪತ್ರಕರ್ತನಾಗಿ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಭೇಟಿ ಮಾಡಿ, “ಪ್ರತಿದಿನ ಎಷ್ಟು ರೋಗಿಗಳು ಆರೋಗ್ಯ ಕೇಂದ್ರಕ್ಕೆ ಬರುತ್ತಾರೆ? ರೋಗಿಗಳಿಗೆ ಯಾವ ರೀತಿಯಲ್ಲಿ ಸ್ಪಂದಿಸುತ್ತೀರಿ? ಕೇಂದ್ರದಲ್ಲಿ ಎಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ?” ಎಂಬುದಾಗಿ ವಿಚಾರಿಸಲಾಯಿತು.
ಅಧಿಕಾರಿಗಳು ಈ ಪ್ರಶ್ನೆಗಳಿಗೆ ಅತ್ಯಂತ ಆತ್ಮೀಯವಾಗಿ ಹಾಗೂ ಸ್ಪಷ್ಟವಾಗಿ ಮಾಹಿತಿ ನೀಡಿದರು. ಆರೋಗ್ಯ ಕೇಂದ್ರಕ್ಕೆ ಬರುವ ಪ್ರತಿಯೊಬ್ಬ ರೋಗಿಯ ಸಮಸ್ಯೆಯನ್ನು ಗಮನವಿಟ್ಟು ಆಲಿಸಿ, ಅಗತ್ಯ ಆರೋಗ್ಯ ತಪಾಸಣೆ ಹಾಗೂ ಸೂಕ್ತ ಸಲಹೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ರೋಗಿಗಳ ಸಂಖ್ಯೆ ಹೆಚ್ಚಾದ ಸಂದರ್ಭದಲ್ಲಿಯೂ ಪ್ರತಿಯೊಬ್ಬರಿಗೂ ಸಮರ್ಪಕವಾಗಿ ಸ್ಪಂದಿಸಿ, ಸಾಧ್ಯವಾದಷ್ಟು ಉತ್ತಮ ಆರೋಗ್ಯ ಸೇವೆ ನೀಡಲು ಸಿಬ್ಬಂದಿ ಬದ್ಧರಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದರು.
ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಜನರೊಂದಿಗೆ ಸೌಜನ್ಯದಿಂದ ನಡೆದುಕೊಂಡು, ಗ್ರಾಮಸ್ಥರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿರುವುದು ಗಮನಾರ್ಹವಾಗಿದೆ. “ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ, ಮುನ್ನೆಚ್ಚರಿಕೆ ವಹಿಸಿ ಆರೋಗ್ಯ ಕಾಪಾಡಿ ಕೊಳ್ಳುವುದು ಮುಖ್ಯ” ಎಂಬ ಸಂದೇಶವನ್ನು ಆರೋಗ್ಯ ಸಿಬ್ಬಂದಿ ನೀಡಿದರು.
ದೇವಣಗಾಂವ್ ಗ್ರಾಮದ ಜನರಿಗೆ ಆರೋಗ್ಯ ಸೇವೆ ಸುಲಭವಾಗಿ ದೊರೆಯುವಂತೆ ಆಯುಷ್ಮಾನ್ ಆರೋಗ್ಯ ಕೇಂದ್ರವು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಮಸ್ಥರು ಇದರ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಆರೋಗ್ಯ ಸಿಬ್ಬಂದಿ ಮನವಿ ಮಾಡಿದರು.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಗಾಲಿಬಸಾಹೇಬ ನಾಗಾವಿ ದೇವಣಗಾಂವ
