ಜ್ಞಾನೇಶ್‌ ಕುಮಾ‌ರ್ ರಾಜೀನಾಮೆ, ಬಂಧನಕ್ಕೆ ಆಗ್ರಹಿಸಿ – ಕಾಂಗ್ರೆಸ್ ಮುಖಂಡರಿಂದ ಧರಣಿ.

ರಾಯಚೂರು ಸೆ.29

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಬಂಧನಕ್ಕೆ ಆಗ್ರಹಿಸಿ ರಾಯಚೂರು ಜಿಲ್ಲಾ 1 ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ನಗರದ ಡಾ, ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನಾ ಧರಣಿ ನಡೆಯಿತು.

ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಶಾಂತಪ್ಪ ಅಧ್ಯಕ್ಷತೆಯಲ್ಲಿ ನಡೆದ ಧರಣಿಯಲ್ಲಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರಕಾರ, ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶು ವ್ಯಕ್ತಪಡಿಸಿದರು. ಪ್ರತಿಭಟನೆಯ ಬಳಿಕ ಪ್ರಧಾನಿ, ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಜ್ಞಾನೇಶ್‌ ಕುಮಾರ್ ಅವರ ಪ್ರತಿಕೃತಿಗಳನ್ನು ದಹಿಸಿದರು.

ಮತಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗುತ್ತಿದೆ ಎಂಬ ಆರೋಪವನ್ನು ಕಾಂಗ್ರೆಸ್ ಮುಖಂಡರು ಮಾಡಿದರು. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು, ಮತದಾರರ ಹಕ್ಕುಗಳನ್ನು ರಕ್ಷಿಸಬೇಕು ಹಾಗೂ ಎಸ್‌ಐಆರ್ ಕುರಿತು ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದರು.

ವಿಧಾನ ಪರಿಷತ್‌ ಸದಸ್ಯ ಎನ್.ಎಸ್ ಬೋಸರಾಜು ಮಾತನಾಡಿ, ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಜನರಲ್ಲಿ ಮೂಡಿರುವ ಅನುಮಾನಗಳಿಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು. ಎಸ್‌ಐಆರ್ ಪ್ರಕ್ರಿಯೆಯ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಮತದಾರರ ಹಕ್ಕುಗಳಿಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕುಮಾ‌ರ್ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆ ಪ್ರಾಮಾಣಿಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿದರು. ಅರ್ಹ ಮತದಾರರು, ದಲಿತರು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕಲಾಗುತ್ತಿದೆ ಎಂಬ ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಆರೆಸ್ಸೆಸ್ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿ ಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ವಿರೋಧ ಪಕ್ಷಗಳನ್ನು ವ್ಯವಸ್ಥಿತವಾಗಿ ಕಟ್ಟಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.

ವಿನೂತನ ಪ್ರತಿಭಟನೆ:-

ಪ್ರತಿಭಟನೆಯ ವೇಳೆ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು ಜ್ಞಾನೇಶ್ ಕುಮಾರ್ ಅವರ ಮುಖವಾಡ ಧರಿಸಿ, ಕೈಗೆ ಕೋಳ ಹಾಕಿಕೊಂಡು ಆಕ್ರೋಶ ವ್ಯಕ್ತಪಡಿಸಿದರು. ನಂತರ ಮೋದಿ, ಅಮಿತ್ ಶಾ ಹಾಗೂ ಜ್ಞಾನೇಶ್‌ ಕುಮಾ‌ರ್ ಅವರ ಪ್ರತಿಕೃತಿಗಳನ್ನು ನಿರ್ಮಿಸಿ ಸಾರ್ವಜನಿಕವಾಗಿ ದಹಿಸ ಲಾಯಿತು. ಈ ವೇಳೆ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಪ್ರತಿಭಟನೆ ತೀವ್ರ ಗೊಳಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಶಾಂತಪ್ಪಮಾನ್ವಿ ಕ್ಷೇತ್ರದ ಶಾಸಕ ಹಂಪಯ್ಯ ನಾಯಕ, ಬಸವರಾಜ ಪಾಟೀಲ ಇಟಗಿ, ಬಶೀರುದ್ದೀನ್, ಆರ್.ಡಿ.ಎ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ಜಿ.ಸಿ ಮೂರ್ತಿ, ರಾಮಣ್ಣ ಇರಬಗೇರ, ರುದ್ರಪ್ಪ ಅಂಗಡಿ, ಮಹಮ್ಮದ್ ಶಾಲಂ, ಅಮರೇಗೌಡ ಅಂಚನಾಳ, ರಜಾಕ್ ಉಸ್ತಾದ್, ಜಯವಂತರಾವ್ ಪತಂಗೆ, ಕರೀಂ ಸಾಬ್, ಶ್ರೀದೇವಿ ನಾಯಕ, ಜಯಣ್ಣ, ಸಾಜೀದ್, ಸಮೀ, ವಿಶ್ವನಾಥ್ ಪಾಟೀಲ್, ಆಂಜನೇಯ, ಗಪೂರ್ ಸಾಬ್, ನಿರ್ಮಲಾ ಬೆಣ್ಣೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button