ಸಮುದಾಯ ಆರೋಗ್ಯ ಅಧಿಕಾರಿಗಳ ಧರಣಿ, ಗ್ರಾಮೀಣ ಆರೋಗ್ಯ ಸೇವೆಗೆ ತೊಂದರೆ – ಸರ್ಕಾರದ ತ್ವರಿತ ಸ್ಪಂದನೆಗೆ ಸಾರ್ವಜನಿಕರಿಂದ ಒತ್ತಾಯ.
ದೇವಣಗಾಂವ ಅ.02


ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಆಯುಷ್ಮಾನ್ ಆರೋಗ್ಯ ಮಂದಿರದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳು (CHO) ದಿನಾಂಕ 28/09/2026 ರಿಂದ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಗ್ರಾಮೀಣ ಮಟ್ಟದಲ್ಲಿ ದೊರೆಯುತ್ತಿದ್ದ ಆರೋಗ್ಯ ಸೇವೆಗಳಿಗೆ ತೊಂದರೆ ಉಂಟಾಗಿದೆ.
ಗ್ರಾಮೀಣ ಪ್ರದೇಶದ ಜನರಿಗೆ ಸ್ಥಳೀಯವಾಗಿಯೇ ಪ್ರಾಥಮಿಕ ಆರೋಗ್ಯ ಸೇವೆ, ಆರೋಗ್ಯ ತಪಾಸಣೆ, ಔಷಧೋಪಚಾರ, ಆರೋಗ್ಯ ಸಲಹೆ ಹಾಗೂ ವಿವಿಧ ಸರ್ಕಾರಿ ಆರೋಗ್ಯ ಕಾರ್ಯಕ್ರಮಗಳ ಕುರಿತು ಮಾರ್ಗದರ್ಶನ ನೀಡುವಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ.
ಇಂತಹ ಸಂದರ್ಭದಲ್ಲಿ ಆರೋಗ್ಯ ಕೇಂದ್ರಗಳ ಸೇವೆ ಸ್ಥಗಿತ ಗೊಂಡಿರುವುದರಿಂದ ವಯೋ ವೃದ್ಧರು, ಮಹಿಳೆಯರು, ಮಕ್ಕಳು ಹಾಗೂ ದೂರದ ಪ್ರದೇಶಗಳಿಂದ ಆರೋಗ್ಯ ಸೇವೆಗಾಗಿ ಬರುವ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.
ಸಮುದಾಯ ಆರೋಗ್ಯ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಬದಿಗೊತ್ತಿ ಧರಣಿ ನಡೆಸುತ್ತಿರುವ ಪರಿಸ್ಥಿತಿಯ ಹಿಂದೆ ತಮ್ಮ ಸೇವಾ ಸಂಬಂಧಿತ ಬೇಡಿಕೆಗಳು ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಗಮನ ಸೆಳೆಯುವ ಉದ್ದೇಶವಿದೆ.
ಅವರ ಬೇಡಿಕೆಗಳನ್ನು ಸರ್ಕಾರ ಮಾನವೀಯ ಹಾಗೂ ಸಕಾರಾತ್ಮಕ ದೃಷ್ಟಿಕೋನದಿಂದ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ.
ಅದೇ ಸಮಯದಲ್ಲಿ, ಸಾರ್ವಜನಿಕರ ಆರೋಗ್ಯ ಸೇವೆ ನಿರಂತರವಾಗಿ ಲಭ್ಯವಾಗುವುದು ಅತ್ಯಂತ ಅಗತ್ಯವಾಗಿದೆ. ಗ್ರಾಮೀಣ ಜನರು ಆರೋಗ್ಯ ಸೇವೆಗಾಗಿ ದೂರದ ಆಸ್ಪತ್ರೆಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗದಂತೆ ಸರ್ಕಾರ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸಾರ್ವಜನಿಕರ ಆಶಯವಾಗಿದೆ.
ಆದ್ದರಿಂದ ರಾಜ್ಯ ಸರ್ಕಾರವು ಸಮುದಾಯ ಆರೋಗ್ಯ ಅಧಿಕಾರಿಗಳೊಂದಿಗೆ ಶೀಘ್ರ ಮಾತುಕತೆ ನಡೆಸಿ, ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಪರಿಶೀಲಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳಬೇಕು.
ಜೊತೆಗೆ ದೇವಣಗಾಂವ ಸೇರಿದಂತೆ ಗ್ರಾಮೀಣ ಪ್ರದೇಶಗಳ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಆರೋಗ್ಯ ಸೇವೆಗಳನ್ನು ಪುನಃ ಸಮರ್ಪಕವಾಗಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.
ಸಮುದಾಯ ಆರೋಗ್ಯ ಅಧಿಕಾರಿಗಳ ಹಿತಾಸಕ್ತಿ ಮತ್ತು ಗ್ರಾಮೀಣ ಜನರ ಆರೋಗ್ಯ ಹಿತ ಎರಡನ್ನೂ ಗಮನ ದಲ್ಲಿಟ್ಟುಕೊಂಡು ಸರ್ಕಾರ ಶೀಘ್ರ ಸ್ಪಂದಿಸಿ, ಧರಣಿಗೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳ ಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಗಾಲಿಬಸಾಹೇಬ ನಾಗಾವಿ ದೇವಣಗಾಂವ

