ಕಾರ್ಮಿಕರ ಸೇವೆ, ಸಾಮಾಜಿಕ ಕಳಕಳಿ ಗುರುತಿಸಿ – ಪ್ರಶಸ್ತಿಗೆ ಆಯ್ಕೆ.

ಆಲಮೇಲ ನ.01

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕಡಣಿ ಗ್ರಾಮದ ಕೇದಾರ್ ಯ ಕ್ಷತ್ರಿ ಅವರು ಕಾರ್ಮಿಕರ ಹಿತಕ್ಕಾಗಿ ಸಲ್ಲಿಸಿದ ಸೇವೆ ಹಾಗೂ ಸಮಾಜ ಸೇವೆಯನ್ನು ಗುರುತಿಸಿ, ತುಮಕೂರಿನ ಕರ್ನಾಟಕ ಸಂಯುಕ್ತ ರಂಗ ಜಾಗೃತಿ ಟ್ರಸ್ಟ್ ವತಿಯಿಂದ ನೀಡಲಾಗುವ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ಅವರ ಹೆಸರಿನ ರಾಜ್ಯ ಪ್ರಶಸ್ತಿ ಹಾಗೂ ಗೌರವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಕೇದಾರ ಯ ಕ್ಷತ್ರಿ ಅವರು ವಿಜಯಪುರ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಸಂಘದ ವಿಜಯಪುರ ಜಿಲ್ಲಾ ಅಧ್ಯಕ್ಷರಾಗಿ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದು, ಅವರಿಗೆ ಸರ್ಕಾರದಿಂದ ದೊರೆಯ ಬೇಕಾದ ಸೌಲಭ್ಯಗಳನ್ನು ಒದಗಿಸಲು ಶ್ರಮಿಸುತ್ತಿದ್ದಾರೆ. ಕಾರ್ಮಿಕರ ಹಕ್ಕುಗಳು ಹಾಗೂ ಕಲ್ಯಾಣಕ್ಕಾಗಿ ಅವರು ಮಾಡುತ್ತಿರುವ ಕಾರ್ಯಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಾಗೂ ವಿಧಾನ ಸೌಧದ ನಿರ್ಮಾತೃ, ಕರ್ನಾಟಕ ಏಕೀಕರಣದ ಪ್ರಮುಖ ಪಾತ್ರಧಾರಿ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ಅವರ ಜನ್ಮಜಯಂತಿ ಪ್ರಯುಕ್ತ ಪ್ರಶಸ್ತಿ ಪ್ರದಾನ ಸಮಾರಂಭವನ್ನು 2026 ರ ನವೆಂಬರ್ 5 ರ ಗುರುವಾರ ಮಧ್ಯಾಹ್ನ 4 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ಸಮೀಪದಲ್ಲಿರುವ ಕನ್ನಡ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು:-

ಕೇದಾರ ಯ ಕ್ಷತ್ರಿ ಅವರು ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ವಿದ್ಯಾರ್ಥಿಗಳ ಶಿಕ್ಷಣಕ್ಕೂ ಪ್ರೋತ್ಸಾಹ ನೀಡುತ್ತಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಡಣಿ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ತಾವರಖೇಡ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ ಬುಕ್ ಮತ್ತು ಪೆನ್ನುಗಳನ್ನು ವಿತರಿಸಿ, ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿದ್ದಾರೆ.

ಗ್ರಾಮದಲ್ಲಿ ವಿವಿಧ ಸಮಾಜ ಮುಖಿ ಕಾರ್ಯಗಳ ಮೂಲಕ ಮಾನವೀಯತೆ ಮೆರೆದಿರುವ ಅವರು, ಕಾರ್ಮಿಕರ ಕಲ್ಯಾಣ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ ಎಂದು ವರದಿಯಾಗಿದೆ.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್: ಗಾಲಿಬಸಾಹೇಬ ನಾಗಾವಿ ದೇವಣಗಾಂವ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button